Sidlaghatta : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಅವುಗಳ ಬಗ್ಗೆ ವ್ಯಾಪಕವಾಗಿ ಪ್ರಚಾರ ನಡೆಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಕರೆನೀಡಿದರು.
ನಗರದ ಬಿಜೆಪಿ ಸೇವಾಸೌಧ ಕಚೇರಿಯಲ್ಲಿ ಗುರುವಾರ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು ಯೋಜನೆಯನ್ಬು ಅರ್ಹ ಪಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದರು.
ಪ್ರಧಾನಿ ನರೇಂದ್ರಮೋದಿ ಯವರ ಜನ್ಮದಿನದ ಅಂಗವಾಗಿ ಇದೇ ಸೆ. 17 ರಂದು ಕೋಲಾರ ಜಿಲ್ಲೆಯ ಕುರುಡುಮಲೆಯಲ್ಲಿ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸದಾನಂದಗೌಡ, ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಈ ಭಾಗದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈಗಾಗಲೇ ವ್ಯಾಪಕವಾಗಿ ಪ್ರಚಾರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕ್ಷೇತ್ರಾದ್ಯಂತ ಮಾಡುತ್ತಿದ್ದೇವೆ. ಸರ್ಕಾರದ ಯೋಜನೆಗಳು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಜನರಿಗೆ ಸೂಕ್ತ ರೀತಿಯ ಮಾರ್ಗದರ್ಶನವನ್ನು ಸಹ ನೀಡುವ ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುಕೂಲ ಕಲ್ಪಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ದಿಕ್ಕುತಪಿಸುವ ಕೆಲಸವನ್ನು ಮಾಡುತ್ತಿದೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾತಿ ಮತ ಭೇದ ಮರೆತು ಸರ್ವರಿಗೂ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ಅನುಷ್ಠಾನಗೊಳಿಸಿ ವಿಶ್ವನಾಯಕರಾಗಿದ್ದಾರೆ ಎಂದರು.
ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾತ್ಮರನ್ನು ಸ್ಮರಿಸುವ ಸಲುವಾಗಿ ದೆಹಲಿಯಲ್ಲಿ ನಿರ್ಮಿಸುತ್ತಿರುವ ಅಮೃತ ವಾಟಿಕ ಎಂಬ ಉದ್ಯಾನವನಕ್ಕಾಗಿ ಮೇರಿ ಮಿಟ್ಟಿ ಮೇರಾ ದೇಶ್ ಕಾರ್ಯಕ್ರಮಕ್ಕೆ ಸೆ. 17 ರಂದು ಕ್ಷೇತ್ರದಲ್ಲಿ ಚಾಲನೆ ನೀಡುವ ಮೂಲಕ ಈ ಭಾಗದ ಪವಿತ್ರ ಮಣ್ಣನ್ನು ಸಂಗ್ರಹಿಸಿ ಕಳುಹಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಗೋಪಾಲಕೃಷ್ಣ (ದೇವನಹಳ್ಳಿ ಗೋಪಿ), ಜಿಲ್ಲಾ ಬಿಜೆಪಿ ವಕ್ತಾರ ರಮೇಶ್ ಬಾಯಿರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಿ.ಸಿ.ನಂದೀಶ್, ಮುಖಂಡ ಆನಂದಗೌಡ, ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಕೆ.ಎಸ್.ಕನಕಪ್ರಸಾದ್, ಕಾರ್ಮಿಕ ಪ್ರಕೋಷ್ಠದ ಸಂಚಾಲಕ ನರೇಶ್, ನಗರಸಭಾ ಸದಸ್ಯ ನಾರಾಯಣಸ್ವಾಮಿ ಹಾಜರಿದ್ದರು.