ಶಿಡ್ಲಘಟ್ಟ ತಾಲ್ಲೂಕಿನ ಪುರಾಣ ಪ್ರಸಿದ್ಧ ಜಂಗಮಕೋಟೆಯ ಪ್ರಸನ್ನ ಗಂಗಾಧರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವನ್ನು ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಉತ್ತರಾಯಣ ವಸಂತ ಋತು ಚೈತ್ರ ಬಹುಳ ಏಕಾದಶಿ ಶನಿವಾರದಂದು ನೂತನವಾಗಿ ನಿರ್ಮಿಸಿರುವ ಪ್ರಸನ್ನ ಗಂಗಾಧರೇಶ್ವರ ಸ್ವಾಮಿಯ ತೇರಿನಲ್ಲಿ ಉತ್ಸವ ಮೂರ್ತಿಗಳನ್ನಿರಿಸಿ, ವಿವಿಧ ಹೂಗಳಿಂದ ಅಲಂಕರಿಸಿ ಬ್ರಹ್ಮರಥೋತ್ಸವವನ್ನು ನಡೆಸಲಾಯಿತು.
ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿದ್ದು, ಗ್ರಾಮದಲ್ಲಿ ದೇವರ ರಥ ಸಾಗಿದಾಗ ಜನಜಂಗುಳಿ ಏರ್ಪಟ್ಟಿತ್ತು. ಪುರಾತನ ಪ್ರಸನ್ನ ಗಂಗಾಧರೇಶ್ವರ ಸ್ವಾಮಿಯ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿದ್ದು, ಪೂಜೆಯ ನಂತರ ಪ್ರಸಾದವನ್ನು ವಿತರಿಸಲಾಯಿತು.
ಗ್ರಾಮದಲ್ಲಿ ಆಗಮಿಸಿದ್ದ ಭಕ್ತರಿಗೆ ಮಜ್ಜಿಗೆ, ಪಾನಕ ಹಾಗೂ ಹೆಸರುಬೇಳೆಯನ್ನು ವಿತರಿಸಿದರು. ಮೆರವಣಿಗೆಯಲ್ಲಿ ವೀರಗಾಸೆ, ಕರಡಿ ಸಮ್ಮೇಳ ಹಾಗೂ ನಾಸಿಕ್ ಡೋಲ್ ವಿಶೇಷ ಆಕರ್ಷಣೆಯಾಗಿತ್ತು. ಗಾರ್ಡಿ ಗೊಂಬೆ, ಕೀಲು ಕುದುರೆ ಮುಂತಾದ ಆಕರ್ಷಕ ಸ್ಥಳೀಯ ಕಲೆಯು ಕೂಡ ಮೆರವಣಿಗೆಯಲ್ಲಿದ್ದವು. ರಥೋತ್ಸವದಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ ತಮಟೆಗಳ ವಾದನಕ್ಕೆ ಭಕ್ತಾದಿಗಳು ಜಾನಪದ ತಂಡಗಳೊಂದಿಗೆ ಹೆಜ್ಜೆಹಾಕುತ್ತಾ ಕಾರ್ಯಕ್ರಮಕ್ಕೆ ಮತ್ತಷ್ಟು ಸೊಬಗು ತಂದಿದ್ದರು.
ದೇವಾಲಯದ ಆವರಣದಲ್ಲಿ ಹೋಮಕುಂಡವನ್ನು ಮಾಡಿ, ಲೋಕ ಕಲ್ಯಾಣಾರ್ಥವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು ಪ್ರಸನ್ನ ಗಂಗಾಧರೇಶ್ವರಸ್ವಾಮಿಗೆ ವಿಶೇಷ ಹೂವಿನ ಅಲಂಕಾರಗಳೊಂದಿಗೆ ಪೂಜೆಗಳನ್ನು ಸಮರ್ಪಣೆ ಮಾಡಲಾಯಿತು, ನೆರೆದಿದ್ದ ಭಕ್ತಾದಿಗಳು ರಥಕ್ಕೆ ಬಾಳೇಹಣ್ಣಿಗೆ ದವನವನ್ನು ಸಿಕ್ಕಿಸಿ ರಥಕ್ಕೆ ಎಸೆಯುವುದರ ಮೂಲಕ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು, ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳು ಕೋಸಂಬರಿ ಪಾನಕಗಳನ್ನು ಭಕ್ತರಿಗೆ ಹಂಚಿಕೆ ಮಾಡಿದರು. ದೇವಾಲಯದಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.