ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿಯಿರುವ ರಾಮಲಿಂಗೇಶ್ವರ ಬೆಟ್ಟದ ರಾಮಲಿಂಗೇಶ್ವರಸ್ವಾಮಿ ಬ್ರಹ್ಮರಥೋತ್ಸವವನ್ನು ಪುಷ್ಯ ಶುಕ್ಲ ಪಕ್ಷ ಪೌರ್ಣಮಿ ಗುರುವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು.
ರಥೋತ್ಸವಕ್ಕೆ ಚಾಲನೆ ನೀಡಿದ ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, “ರಾಮ ಮತ್ತು ಈಶ್ವರ ಒಂದೆಡೆ ನೆಲೆಸಿರುವುದು ಅಪರೂಪ. ದೇಶದ ದಕ್ಷಿಣದ ತುತ್ತ ತುದಿಯಲ್ಲಿ ರಾವಣನೊಂದಿಗೆ ಯುದ್ಧಕ್ಕೆ ತೆರಳುವ ಮುಂಚೆ ರಾಮನು ಶಿವನನ್ನು ಪೂಜಿಸಿದ ಕ್ಷೇತ್ರ ರಾಮೇಶ್ವರವಾಗಿದ್ದರೆ, ತಾಲ್ಲೂಕಿನಲ್ಲಿ ಶ್ರೀರಾಮ ವನವಾಸದ ಕಾಲದಲ್ಲಿ ಪೂಜಿಸಲೆಂದು ಸ್ಥಾಪಿಸಿದ್ದ ಇಷ್ಟಲಿಂಗವಿರುವ ಕ್ಷೇತ್ರ ರಾಮಲಿಂಗೇಶ್ವರವೆಂದೇ ಪ್ರಸಿದ್ಧವಾಗಿದೆ. ಇದು ಪವಿತ್ರವಾದ ಕ್ಷೇತ್ರ” ಎಂದು ಹೇಳಿದರು.
ಬ್ರಹ್ಮರಥೋತ್ಸವಕ್ಕೆ ವಿವಿಧ ತಾಲ್ಲೂಕು ಹಾಗೂ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಸಾಕಷ್ಟು ದೂರಕ್ಕೇ ಕಾಣಬಲ್ಲ ಅತಿ ಎತ್ತರವಾದ ಧ್ವಜಸ್ತಂಭ, ದೊಡ್ಡದಾದ ಏಕಶಿಲಾ ಬಸವಣ್ಣ ಈ ದೇವಾಲಯದ ವೈಶಿಷ್ಟ್ಯ. ಬೇರೆಲ್ಲಿಯೂ ಕಾಣಸಿಗದ ಹನುಮಲಿಂಗ ದೇವಾಲಯ ಕೂಡ ಇಲ್ಲಿದೆ. ರಾಮದೊಣೆ, ಲಕ್ಷ್ಮಣದೊಣೆ ಮತ್ತು ಸೀತಾದೊಣೆಗಳೆಂಬ ನೀರಿನ ಸೆಲೆಗಳಾದ ದೊಣೆಗಳಿಲ್ಲಿವೆ. ಇವುಗಳಲ್ಲಿ ಸದಾ ನೀರು ತುಂಬಿರುತ್ತವೆ. ಅವುಗಳನ್ನು ರಾಮ ನಿರ್ಮಿಸಿದ್ದನೆಂಬ ಪ್ರತೀತಿಯಿದೆ. ಭಕ್ತರು ಅವುಗಳಿಂದ ನೀರನ್ನು ಮೊಗೆದು ತಲೆಗೆ ಸಿಂಪಡಿಸಿಕೊಳ್ಳುತ್ತಿದ್ದರು.
ದೇವಾಲಯ ಸಂಚಾಲಕಿ ಎಂ.ಸುನೀತ ಶ್ರೀನಿವಾಸರೆಡ್ಡಿ, ರಾಜಸ್ವ ನಿರೀಕ್ಷಕರಾದ ಪ್ರಶಾಂತ್, ವೇಣುಗೋಪಾಲ್, ನವೀನ್ ಹಾಜರಿದ್ದರು.