ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಈ ದಿನ ವರ್ಷದ ಮೊದಲ ರಾಷ್ಟ್ರೀಯ ಹಬ್ಬ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಮಹಾನ್ ವ್ಯಕ್ತಿಗಳು ಪರಿಶ್ರಮದಿಂದ ಕಟ್ಟಿ ಬೆಳೆಸಿರುವ ಭಾರತದ ಭವಿಷ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ಯುವ ಜನತೆಯ ಮುಂದಿದೆ ಎಂದು ಅವರು ತಿಳಿಸಿದರು.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಭಾರತದ ಸಂವಿಧಾನದ ಆಶಯಗಳನ್ನು ಅರಿತು ಅದರಂತೆ ನಡೆಯುವುದು ಇಂದಿನ ತುರ್ತು ಅಗತ್ಯ. ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಿದರೆ ದೇಶದ ಅಭಿವೃದ್ಧಿ, ಐಕ್ಯತೆ, ಸಮಗ್ರತೆ ತಾನಾಗಿಯೆ ಆಗುತ್ತದೆ ಎಂದರು.
ತಹಶೀಲ್ದಾರ್ ಬಿ.ಎನ್.ರಾಜೀವ್ ಮಾತನಾಡಿ, ನಗರದಲ್ಲಿ ಸ್ವಚ್ಛತೆಗೆ ಜನಪ್ರತಿನಿಧಿಗಳು ಆದ್ಯತೆ ನೀಡಬೇಕು. ಅತ್ಯಂತ ಸ್ವಚ್ಛವಾಗಿರಿಸಿಕೊಂಡಿರುವ ವಾರ್ಡುಗಳ ನಗರಸಭಾ ಸದಸ್ಯರನ್ನು ಪುರಸ್ಕರಿಸಲಾಗುವುದು ಎಂದು ಪ್ರಕಟಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ದತ್ತಿ ಕಾರ್ಯಕ್ರಮದ ಅಡಿಯಲ್ಲಿ ಕೋವಿಡ್ ಸಮಯದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಇಒ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್, ಸಿಡಿಪಿಒ ನಾಗವೇಣಿ, ಶಿಕ್ಷಕರಾದ ಅಗಜಾನನಮೂರ್ತಿ, ರಂಗನಾಥ್, ಕೆಂಪಣ್ಣ, ಆಂಜನೇಯ, ನಾರಾಯಣಸ್ವಾಮಿ, ನಗರಸಭಾ ಸದಸ್ಯರಾದ ಅನಿಲ್ ಕುಮಾರ್, ಕೃಷ್ಣಮೂರ್ತಿ ಹಾಜರಿದ್ದರು.