ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹೇಳಿದರು.
ಶಿಡ್ಲಘಟ್ಟ ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಅಕ್ಷರದಾಸೋಹ ಬಿಸಿಯೋಟ ಯೋಜನೆಯಡಿ ಕಾರ್ಯನಿರ್ವಹಿಸುವ ಅಡುಗೆ ಸಿಬ್ಬಂದಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ನಿವಾರಿಸುವುದು ಹಾಗೂ ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆಗೆ ಬಿಸಿಯೂಟ ಯೋಜನೆ ಸಹಕಾರಿಯಾಗಿದೆ. ಇಂತಹ ಉತ್ತಮ ಯೋಜನೆ ಸದುಪಯೋಗವಾಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿದೆ. ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಅನುಷ್ಠಾನಗೊಳಿಸುವಲ್ಲಿ ಅಡುಗೆ ಸಿಬ್ಬಂದಿಯ ಕಾರ್ಯ ಬಹುಮುಖ್ಯವಾಗಿದೆ. ಅಡುಗೆ ಸಿಬ್ಬಂದಿ ತಯಾರಿಸಿದ ಅಡುಗೆಯನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರು ಮೊದಲು ಸೇವಿಸಿ ನಂತರ ಮಕ್ಕಳಿಗೆ ನೀಡಬೇಕು. ಪ್ರಮುಖವಾಗಿ ಅಡುಗೆಯವರು ಅಡುಗೆ ಮನೆಯ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಡುಗೆ ಅನಿಲದ ಬಳಕೆಯ ಬಗ್ಗೆ ಬಿಸಿಯೂಟ ಅಡುಗೆ ಸಿಬ್ಬಂದಿ ಯಾವ ಯಾವ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ನಗರದ ಇಂಡೇನ್ ಗ್ಯಾಸ್ ಏಜೆನ್ಸಿಯ ಅಣ್ಣಯ್ಯಪ್ಪ ತಿಳಿಸಿದರೆ, ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಅಶೋಕ್ ಅಗ್ನಿನಂದಕ, ಗ್ಯಾಸ್ ಬೆಂಕಿಯ ಸುರಕ್ಷತೆ ಬಗ್ಗೆ ವಿವರಿಸಿ ಪ್ರಾತ್ಯಕ್ಷಿಕೆ ಪ್ರದರ್ಶನ ಮಾಡಿದರು.
ಅಡುಗೆ ಸಿಬ್ಬಂದಿಗೆ ರಸಪ್ರಶ್ನೆ, ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಗ್ನಿ ಶಾಮಕ ಠಾಣೆಯ ಅಧಿಕಾರಿ ಕದಿರಪ್ಪ, ಕನಕಪ್ಪ, ಗುರುನಾಥ್, ಹರೀಶ್, ಇಂಡೇನ್ ಗ್ಯಾಸ್ ಏಜೆನ್ಸಿಯ ಮೇಲ್ವಿಚಾರಕ ಪ್ರಕಾಶ್, ಸಂಪನ್ಮೂಲ ವ್ಯಕ್ತಿ ಎಚ್.ಎಸ್.ರುದ್ರೇಶಮೂರ್ತಿ, ಶಿಕ್ಷಕರಾದ ಚಂದ್ರಶೇಖರ್, ಪ್ರಭಾಕರ್, ಚಂದ್ರು, ಅಕ್ಷರ ದಾಸೋಹ ಸಿಬ್ಬಂದಿ ಸಂಘದ ಅಧ್ಯಕ್ಷೆ ಮುನಿಲಕ್ಷ್ಮಮ್ಮ ಹಾಜರಿದ್ದರು.