Sidlaghatta : ಸೈನಿಕರಷ್ಟೇ ದೇಶಸೇವೆ ಮಾಡುವ ಕಾಲ ಸನ್ನಿಹಿತವಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈಗ ಗುಲಾಬಿ ಮಹಿಳಾ ಸೈನಿಕರಂತೆ ಕಾರ್ಯಪ್ರವೃತ್ತರಾಗಬೇಕು. ತಮ್ಮ ವ್ಯಾಪ್ತಿಯ ಪ್ರತಿ ಮನೆಯಲ್ಲಿಯೂ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಪ್ರೇರೇಪಿಸಬೇಕು, ಆ ಮೂಲಕ ಪ್ರಜಾಪ್ರಭುತ್ವದ ಜ್ಯೋತಿ ಬೆಳಗಬೇಕು ಎಂದು ತಾಲ್ಲೂಕು ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಯೂ ಆದ ಇಒ ಜಿ.ಮುನಿರಾಜ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲ್ಲೂಕಿನ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಿಂದ ಮತದಾನದ ಅರಿವು ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ಅರ್ಹ ಮತದಾರನೂ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಯಶಸ್ಸು ಲಭಿಸುತ್ತದೆ. ಮತಗಟ್ಟೆಗಳಲ್ಲಿ ಪ್ರತಿಯೊಂದು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಹಾಗೂ ಮತದಾನ ಎಂಬುದು ದೇಶ ಕಟ್ಟುವ ಕ್ರಿಯೆ ಎಂದು ಜನರಲ್ಲಿ ಅರಿವು ಮತ್ತು ಜಾಗೃತಿಯನ್ನು ಮೂಡಿಸಬೇಕು. ಸಮಯ ಕಡಿಮೆಯಿದ್ದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದರು.
ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ, ನಿಷ್ಪಕ್ಷಪಾತವಾಗಿ ಪ್ರಜಾಪ್ರಭುತ್ವದ ಅಡಿಯಲ್ಲಿ ಮತದಾನ ಮಾಡುವಂತೆ ನೀವು ಜನರಲ್ಲಿ ಮನವೊಲಿಸಬೇಕು. ಈ ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ನಮ್ಮ ಕರ್ತವ್ಯವನ್ನು ಪಾಲಿಸೋಣ ಎಂದರು.
ನಂತರ ಮತದಾನದ ಕುರಿತು ಅರಿವು ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ಮನೋಹರ್, ಡಾ.ವಿಜಯಕುಮಾರ್, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಮುನಿರತ್ನಮ್ಮ, ಗೀತಾ, ನಂದಿನಿ, ನಬೀಬುಲ್ಲ, ಕೀರ್ತಿ, ಮಂಜು, ನರಸಿಂಹಮೂರ್ತಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.