Sidlaghatta : ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ 140 ಕೋಟಿ ಜನರು ನೆಮ್ಮದಿಯಿಂದ ಬದುಕಲು ಕಾರಣ. ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಮಹಾತ್ಮರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಏಪ್ರಿಲ್ 14ರಂದು ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದ್ದು, ಈ ಜಯಂತಿಯನ್ನು ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ತಮ್ಮ ಅಧಿಕಾರ ಅವಧಿಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಮಾನತೆಗೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ಡಾ. ಅಂಬೇಡ್ಕರ್ ಅವರ ಆಶಯದಂತೆ ಸರ್ಕಾರದ ಪ್ರತಿಯೊಂದು ಯೋಜನೆಯೂ ಅರ್ಹ ಫಲಾನುಭವಿಗಳಿಗೆ ತಲುಪಬೇಕೆಂದು ನಾನು ಕಾರ್ಯನಿರ್ವಹಿಸುತ್ತಿದ್ದೇನೆ. ಈಗಾಗಲೇ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ₹4 ಕೋಟಿ ಮೀಸಲಿಡಲಾಗಿದ್ದು, ಸುಸಜ್ಜಿತ ಭವನ ನಿರ್ಮಾಣದ ಭೂಮಿ ಪೂಜೆ ಏ.14ರಂದು ನೆರವೇರಿಸಲಾಗುವುದು ಎಂದು ಅವರು ತಿಳಿಸಿದರು.
ತಾಲ್ಲೂಕು ಮಟ್ಟದಲ್ಲಿ ಬಾಬು ಜಗಜೀವನರಾಂ ಮತ್ತು ಡಾ. ಅಂಬೇಡ್ಕರ್ ಜಯಂತಿಗಳನ್ನು ಪ್ರತ್ಯೇಕವಾಗಿ ಆಚರಿಸಬೇಕೆಂದು ಕೆಲವು ಮುಖಂಡರು ಸಲಹೆ ನೀಡಿದರೂ, ಈ ಬಾರಿ ಏ.14ರಂದು ಎರಡೂ ಜಯಂತಿಗಳನ್ನು ಒಂದೇ ದಿನ ಆಚರಿಸಲು ಸಹಕರಿಸುವಂತೆ ಮನವಿ ಮಾಡಿದರು. ಅಂಬೇಡ್ಕರ್ ಭವನ, ಗುರುಭವನ ಹಾಗೂ ಸರ್ಕಾರಿ ನೌಕರರ ಭವನದ ಗುದ್ದಲಿ ಪೂಜೆ ಕೂಡಾ ಇದೇ ದಿನ ನಡೆಯಲಿದೆ.
“ಅಂಬೇಡ್ಕರ್ ಭವನ ನನ್ನ ಕನಸು. ಅದು ಹೇಗೆ ನಿರ್ಮಾಣವಾಗಲಿದೆ ಎಂಬುದನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಬೃಹತ್ ಪರದೆಯಲ್ಲಿ ಪ್ರತಿಯೊಬ್ಬರೂ ವೀಕ್ಷಿಸುವ ವ್ಯವಸ್ಥೆ ಮಾಡಲಾಗುವುದು” ಎಂದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸುವಂತೆ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಸರ್ಕಾರಿ ನೌಕರರು ಜಯಂತಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾಲ್ಲೂಕು ಪಂ. ಇಒ ಹೇಮಾವತಿ, ಜೆಡಿಎಸ್ ಹಿರಿಯ ಮುಖಂಡ ಬಂಕ್ ಮುನಿಯಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ತಾದೂರು ರಘು, ಗಂಜಿಗುಂಟೆ ನರಸಿಂಹಮೂರ್ತಿ, ಸಿ.ವಿ. ಲಕ್ಷ್ಮಣರಾಜು ಮತ್ತಿತರರು ಹಾಜರಿದ್ದರು.