Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು (Anur) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂಟಿ (Belluti) ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ” ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ (V Muniyappa) ಅವರು ಮಾತನಾಡಿದರು.
ಗ್ರಾಮೀಣ ಭಾಗದ ಸಮಸ್ಯೆಗಳನ್ನು ಜನರ ಬಳಿಗೇ ಹೋಗಿ ಆಲಿಸಿ ಬಗೆಹರಿಸಿಕೊಡುವ ನಿಟ್ಟಿನಲ್ಲಿ ತಾಲೂಕು ಆಡಳಿತದಿಂದ ಗ್ರಾಮವಾಸ್ತವ್ಯವನ್ನು ಆಯೋಜಿಸಲಾಗಿದ್ದು ಪಿಂಚಣಿ, ಫೌತಿಖಾತೆ, ಖಾತೆ ತಿದ್ದುಪಡಿ, ಸ್ಮಶಾನ, ನಿವೇಶನ ನೀಡುವುದು, ರಸ್ತೆ ಸಮಸ್ಯೆ ಅಥವಾ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸುವುದು, ಇವೆಲ್ಲವನ್ನೂ ಒಳಗೊಂಡಂತೆ ಗ್ರಾಮವಾಸ್ತವ್ಯದ ಮೂಲಕ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು ಎಂದರು.
ತಹಸೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸವಲತ್ತು ಸಿಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಜನರೊಂದಿಗೆ ಬೆರೆತು ಅಗತ್ಯ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಇಂದಿನ ಗ್ರಾಮ ವಾಸ್ತವ್ಯದಲ್ಲಿ ಪ್ರಮುಖವಾಗಿ ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಭಿರ ಆಯೋಜಿಸಿದರೆ, ಕಂದಾಯ ಇಲಾಖೆಯಿಂದ ಗ್ರಾಮದಲ್ಲಿರುವ ಸರ್ಕಾರಿ ಜಾಗದ ಗಡಿ ಗುರುತಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದ್ದು ಸೇರಿದಂತೆ ಗ್ರಾಮದ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿರುವಂತಹ ಸುಮಾರು ೧೨ ಮಂದಿಗೆ ಹಕ್ಕುಪತ್ರ ವಿತರಣೆ ಹಾಗು ೫೪ ಮಂದಿ ಫಲಾನುಭವಿಗಳಿಗೆ ಪಿಂಚಿಣಿ ಆಧೇಶಪ್ರತಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷ ವಿಶ್ವಾಸ್, ಮಾಜಿ ಉಪಾಧ್ಯಕ್ಷ ವಿಜಯೇಂದ್ರ, ತಾ.ಪಂ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ರೇಷ್ಮೆ ಇಲಾಖೆಯ ತಿಮ್ಮರಾಜು, ಕೃಷಿ ಇಲಾಖೆಯ ಮಂಜುನಾಥ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬಿ.ನೌತಾಜ್, ಸಹಾಯಕ ಶಿಶು ಅಭಿವೃದ್ದಿ ಅಧಿಕಾರಿ ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್, ಗ್ರಾ.ಪಂ ಪಿಡಿಓ ಕಾತ್ಯಾಯಿನಿ, ರೈತ ಮುಖಂಡರಾದ ಭಕ್ತರಹಳ್ಳಿ ಬೈರೇಗೌಡ, ಬಿ.ಕೆ.ಮುನಿಕೆಂಪಣ್ಣ, ರಾಜಸ್ವ ನಿರೀಕ್ಷಕ ಪ್ರಶಾಂತ್, ಗ್ರಾಮ ಲೆಕ್ಕಿಗ ನಾಗರಾಜ್, ಗ್ರಾ.ಪಂ ಸದಸ್ಯರೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.