Sidlaghatta : ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ (Child Labour) ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮದ್ ರೋಷನ್ ಷ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕಾರ್ಮಿಕ ಇಲಾಖೆ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕಾರ್ಯಾಗಾರ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಎಲ್ಲರ ಸಹಕಾರ ಅಗತ್ಯವಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ ದೇಶದ ಆಸ್ತಿಯನ್ನಾಗಿ ರೂಪಿಸಿದರೆ ಮಾತ್ರ ಪ್ರಗತಿ ಕಾಣಲು ಸಾಧ್ಯ. ಹೋಟೆಲ್ ಗಳು, ಮೆಕ್ಯಾನಿಕಲ್ ಶ್ಯಾಪ್ ಮತ್ತು ತೋಟಗಳಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚಿಕೊಳ್ಳುವುದು ಕಾನೂನು ಪ್ರಕಾರ ಅಪರಾಧ. ಇಂತಹ ಹೀನ ಪದ್ಧತಿಯನ್ನು ಎಲ್ಲರೂ ವಿರೋಧಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಬೇಕು ಎಂದು ನುಡಿದರು.
ವಿದ್ಯಾರ್ಥಿದಿಸೆಯಿಂದಲೇ ಬಾಲ್ಯ ವಿವಾಹ ತಡೆಗೆ ಜನರಲ್ಲಿ ಕಾನೂನು ಅರಿವು ಮೂಡಿಸಬೇಕು. ಬಾಲ್ಯ ವಿವಾಹವು ಸಾಮಾಜಿಕ ಪಿಡುಗಾಗಿದೆ. ಕಾನೂನಿನಡಿಯಲ್ಲಿ ಬಾಲ್ಯ ವಿವಾಹ ಆದವರು ಮಾತ್ರವಲ್ಲ, ಇದಕ್ಕೆ ಪ್ರೇರೇಪಿಸಿದ ಎಲ್ಲರೂ ಶಿಕ್ಷೆಗೆ ಕಾರಣರಾಗುತ್ತಾರೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜಾ.ಜೆ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ತಹಶೀಲ್ದಾರ್ ಬಿ.ಎನ್.ಸ್ವಾಮಿ, ಚಿಕ್ಕಬಳ್ಳಾಪುರ ಉಪವಿಭಾಗದ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ, ಕಾರ್ಖಾನೆಗಳ ಉಪನಿರ್ದೇಶಕ ಎಂ.ಎ.ಸೋಮಶೇಖರ, ನಗರಸಭೆ ಪೌರಾಯುಕ್ತ ಮಂಜುನಾಥ್ ಹಾಜರಿದ್ದರು.