Devaramallur, Sidlaghatta : ಗಿಡ ಮರಗಳು ಪರಿಸರದ ಜೀವನಾಡಿಗಳು, ಪರಿಸರದ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಎಲ್ಲೆಡೆ ಗಿಡ ಮರಗಳನ್ನು ಬೆಳೆಸುವ ಪರಿಪಾಠ ಬೆಳೆಸಬೇಕಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪೂಜಾ ಜೆ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದ ಮಳ್ಳೂರಾಂಭ ದೇವಾಲಯದ ಆವರಣದಲ್ಲಿ ಭಾನುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ 101 ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಕೃತಿ ನಮಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶುದ್ಧ ನೀರು, ಗಾಳಿ, ಆಹಾರ ಸೇರಿದಂತೆ ಇನ್ನು ಅನೇಕ ಅಗತ್ಯ ವಸ್ತುಗಳನ್ನು ನೀಡುತ್ತಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವ ಇಚ್ಛೆಯಿಂದ ಗಿಡ, ಮರಗಳನ್ನು ಬೆಳೆಸಿ, ಪರಿಸರ ಸಂರಕ್ಷಿಸಬೇಕೆಂದು ಹೇಳಿದರು.
ಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿಯ ತಾಪಮಾನ ಹೆಚ್ಚಾಗಿದ್ದು ಅದರಿಂದ ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ. ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸಿ ಕಾಡನ್ನು ಉಳಿಸಿ, ಬೆಳೆಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ವಕೀಲರಾದ ವಿ.ಸುಭ್ರಮಣ್ಯಪ್ಪ, ಮುನಿರಾಜಗೌಡ, ಅಮೂಲ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಎಂಕಟೇಶ್, ರಾಜಣ್ಣ, ಮುಖಂಡರಾದ ವಿ.ವೇಣುಗೋಪಾಲ್, ಬಿ.ಎಲ್.ಮುನಿರಾಜು, ವೆಂಕೋಬರಾವ್, ರಾಕೇಶ್, ಅರಣ್ಯ ಇಲಾಖೆಯ ಕೆ.ಆನಂದ್ ಹಾಜರಿದ್ದರು.