Sidlaghatta : ತಾಲ್ಲೂಕಿನ ಗಂಜಿಗುಂಟೆ (Ganjigunte) ಗ್ರಾಮದಲ್ಲಿ ಶುಕ್ರವಾರ ನಡೆದ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ (M T B Nagaraj) ಅವರು ಮಾತಾಡಿದರು.
ಬಡವರಿಗೆ ಮತ್ತು ರೈತಾಪಿ ವರ್ಗಕ್ಕೆ ಅವರ ಮನೆ ಬಾಗಿಲಿಗೆ ಸರ್ಕಾರಿ ಸವಲತ್ತು ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ರೂಪಿಸಿರುವ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇದು 7 ನೇ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದ ಆಶಯವನ್ನು ಅಧಿಕಾರಿಗಳು ಕಾರ್ಯರೂಪಕ್ಕೆ ತರಬೇಕು. ಸ್ಮಶಾನ, ಗುಂಡುತೋಪು, ಗೋಮಾಳ ಇನ್ನಿತರ ಸಾರ್ವಜನಿಕ ಆಸ್ತಿಗಳನ್ನು ಅಕ್ರಮವಾಗಿ ಭೂ ಕಬಳಿಕೆ ಮಾಡಿದ್ದರೆ ಅಂತಹ ಒತ್ತುವರಿಯನ್ನು ತೆರೆವುಗೊಳಿಸಬೇಕು ಎಂದರು.
ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಅಂಗವಾಗಿ ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಯಡಿ 7,136 ಪಲಾನುಭವಿಗಳಿಗೆ ಸವಲತ್ತು ಮಂಜೂರಾತಿ ಮತ್ತು ಕಾರ್ಯಾದೇಶ ಪತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತವೇ ಗಂಜಿಗುಂಟೆ ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಬಗೆಹರಿಸಬಹುದಾದ ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮವಹಿಸಲಾಗುವುದು. ಗಂಜಿಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಕೆರೆಗಳ ಒತ್ತುವರಿ ಸೇರಿದಂತೆ ಒಟ್ಟು 24 ಎಕರೆ ಜಮೀನು ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಈ ಜಮೀನಿನಲ್ಲಿ ಅರಣ್ಯೀಕರಣಕ್ಕೆ ಕೂಡ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಯಡಿ ಪಲಾನುಭವಿಗಳಿಗೆ ಸವಲತ್ತು ಮಂಜೂರಾತಿ ಮತ್ತು ಕಾರ್ಯಾದೇಶ ಪತ್ರಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ತಹಶೀಲ್ದಾರ್ ರಾಜೀವ್, ಗಂಜೆಗುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಶ್ವತ್ಥಮ್ಮ, ಉಪಾಧ್ಯಕ್ಷ ನರಸಿಂಹಮೂರ್ತಿ, ಸದಸ್ಯರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.