Sidlaghatta : ರೋಗಗಳ ತಡೆಗಟ್ಟುವಲ್ಲಿ ಸ್ವಚ್ಚತೆ ಮಹತ್ವದ ಪಾತ್ರ ವಹಿಸುತ್ತದೆ, ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಮುಂದಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಹೇಳಿದರು.
ತಾಲ್ಲೂಕಿನ ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗು ಆಶಾ ಕಾರ್ಯಕರ್ತರೊಂದಿಗೆ ಆಸ್ಪತ್ರೆ ಆವರಣವನ್ನು ಸ್ವಚ್ಚಗೊಳಿಸುವ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ, ಸುತ್ತಲಿನ ಪರಿಸರ ಸ್ವಚ್ಚವಾಗಿದ್ದಲ್ಲಿ ಆರೋಗ್ಯ ಸಹ ಉತ್ತಮವಾಗಿರುತ್ತದೆ. ಆರೋಗ್ಯ ಇಲಾಖೆಯ ಅಭಿಯಾನ ನಿರ್ದೇಶಕರ ಸೂಚನೆಯ ಮೇರೆಗೆ ತಾಲ್ಲೂಕಿನ ಮೇಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ. ಇದೇ ರೀತಿ ತಾಲೂಕಿನಾಧ್ಯಂತ ಇರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ತಿಂಗಳಿಗೆ ಒಂದು ದಿನ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಮೂಲಕ ರೋಗಿಗಳಿಗೆ ಉತ್ತಮ ಆರೋಗ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದರು.
ಈ ಸಂದರ್ಬದಲ್ಲಿ ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮೇಶ್, ತಾಲ್ಲೂಕು ಆರೋಗ್ಯ ನಿರೀಕ್ಷಕ ದೇವರಾಜ್, ಪ್ರಯೋಗಶಾಲೆಯ ಅಧಿಕಾರಿ ದೇವರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.