ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಭೌತಿಕವಾಗಿ ಸ್ಥಗಿತಗೊಂಡಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಜ್ಞಾನ ಮತ್ತು ಕೌಶಲಗಳ ಕಲಿಕೆಯ ಕೊರತೆಯನ್ನು ನೀಗಿಸುವ ಸಲುವಾಗಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರವನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಹೇಳಿದರು.
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಿರುವ ನಾಲ್ಕು ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಕಳೆದ ಎರಡು ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೇವಲ ಆನ್ಲೈನ್ ಮೂಲಕ ಮಾತ್ರ ನಡೆಸಲಾಗಿತ್ತು. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಜ್ಞಾನ ಮತ್ತು ಕೌಶಲಗಳ ಕಲಿಕೆಯ ಕೊರತೆಯನ್ನು ನೀಗಿಸುವ ಸಲುವಾಗಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ರವರ ಸೂಚನೆಯಂತೆ ಕರ್ನಾಟಕ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ ಮೇ ತಿಂಗಳ ಬೇಸಿಗೆ ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಾಲ್ಕರಿಂದ ಏಳು ದಿನಗಳ ಕಾಲ ಬೇಸಿಗೆ ಶಿಬಿರಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಗೈಡ್ಸ್ ಜ್ಞಾನ ಮತ್ತು ಕೌಶಲಗಳು ಹಾಡು ನೃತ್ಯ ಹೊರಸಂಚಾರ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯಗಳನ್ನು ಹಾಗೂ ಸಂತಸದಾಯಕ ಜೀವನವನ್ನು ನಡೆಸಲು ಬೇಕಾಗುವ ಕೌಶಲಗಳನ್ನು ಬೆಳೆಸಲಾಗುವುದು ಎಂದರು.
ಶಿಬಿರದಲ್ಲಿ ಸ್ಕೌಟ್ಸ್ ಗೈಡ್ಸ್‌ನ ಮೂಲ ಸಿದ್ಧಾಂತಗಳು, ನಿಯಮಗಳು ರಾಷ್ಟ್ರಧ್ವಜ, ರಾಷ್ಟ್ರಪ್ರೇಮ, ಸರ್ವಧರ್ಮ ಪ್ರಾರ್ಥನೆ, ಪ್ರಥಮ ಚಿಕಿತ್ಸೆ ,ಅಂದಾಜು ಗಣನೆ, ದಿಕ್ಕುಗಳ ಪರಿಚಯ ಹೀಗೆ ಹಲವಾರು ಜೀವನ ಕೌಶಲಗಳನ್ನು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳು ರಜಾ ಅವಧಿಯ ಸದ್ಬಳಕೆ ಮಾಡಿಕೊಂಡಂತಾಗುತ್ತದೆ ಎಂದರು.
ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರಾಜೇಶ್ವರಿ ಉಜ್ರೇಕರ್ ಮಾತನಾಡಿ, ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಉತ್ತಮ ನಡವಳಿಕೆ ಮತ್ತು ಶಿಸ್ತಿನ ಜೀವನಕ್ಕೆ ಸಹಕಾರಿಯಾಗುತ್ತವೆ ಹಾಗಾಗಿ ಎಲ್ಲ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು .
ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿ ಹಾಗೂ ಗೈಡ್ ವಿಭಾಗದ ದಳನಾಯಕಿ ನಾಗರತ್ನ ದುರಗಣ್ಣವರ, ಪ್ರೌಢಶಾಲಾ ಸಹಶಿಕ್ಷಕ ಸಂಘದ ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ, ಹಿರಿಯ ಶಿಕ್ಷಕ ನಾರಾಯಣಸ್ವಾಮಿ, ಶಿಕ್ಷಕಿಯರಾದ ಜಿ.ಎನ್.ಲತಾ. ಮೇಘಾಜೋಶಿ ಮತ್ತು ಸಿಬ್ಬಂದಿ ಹಾಗೂ 70 ಶಿಬಿರಾರ್ಥಿಗಳು ಭಾಗವಹಿಸಿದ್ದರು.