ನ್ಯಾಯಾಲಯದ ಭಾಗವಾದ ವಕೀಲರ ಮೇಲೆ ಪದೇ ಪದೇ ನಡೆಯುತ್ತಿರುವ ಹಲ್ಲೆಗಳಿಂದ ನಿರ್ಭೀತವಾಗಿ ಕಾನೂನು ಬದ್ದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಷ್ಟ ಸಾಧ್ಯವಾದ್ದರಿಂದ ಕೂಡಲೇ ವಕೀಲರ ಸಂರಕ್ಷಣಾ ಕಾಯಿದೆಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ.ಲೋಕೇಶ್ ಆಗ್ರಹಿಸಿದರು.
ಶಿಡ್ಲಘಟ್ಟ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಕೀಲರ ಸಂರಕ್ಷಣಾ ಕಾಯಿದೆ ಜಾರಿಗೊಳಿಸುವುದು ಹಾಗೂ ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಗುರುಪ್ರಸಾದ್ ಎಂಬುವರ ಮೇಲೆ ಶಾಹೀದ್ ಎನ್ನುವ ವ್ಯಕ್ತಿ ನ್ಯಾಯಾಲಯದ ಆವರಣದಲ್ಲಿ ವಿನಾಕಾರಣ ಹಲ್ಲೆ ಮಾಡಿರುವುದು ಖಂಡನೀಯ. ಕೂಡಲೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವುದು ಸೇರಿದಂತೆ ಇಂತಹ ಘಟನೆಗಳು ಮರುಕಳಿಸದ ರೀತಿಯಲ್ಲಿ ಕ್ರಮ ಜರುಗಿಸಬೇಕು. ವಕೀಲರ ಹಿತದೃಷ್ಟಿಯಿಮದ ವಕೀಲರ ಸಂರಕ್ಷಣಾ ಕಾಯ್ದೆ ಕೂಡಲೇ ಜಾರಿಗೆ ತರಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಎಚ್.ಎಂ.ರಾಮಕೃಷ್ಣ, ಅನಂತು, ಪ್ರಭು, ಕೇಶವಮೂರ್ತಿ.ವಿ. ವೀರಕುಮಾರ್, ಡಿ.ಸಿ.ಮಂಜುನಾಥ, ಅಶೋಕ ಹಾಜರಿದ್ದರು.