ಶಿಡ್ಲಘಟ್ಟ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ನರೇಗಾ ಯೋಜನೆಯ ಮೂಲಕ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಾಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಯ ಜೊತೆಗೆ ವ್ಯವಸಾಯದಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಅವಕಾಶಗಳಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಗ್ರಾಮ ನೈರ್ಮಲ್ಯಕ್ಕೆ ಪೂರಕವಾಗಿರುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಈ ಯೋಜನೆಯ ಮೂಲಕ ರೈತರಿಗೆ ಹೆಚ್ಚಿನ ಅನುಕೂಲವನ್ನು ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.
ರಾಜ್ಯದಲ್ಲಿ ಕೊರೊನಾ ಎಂಬ ಮಹಾಮಾರಿಯಿಂದ ಎಲ್ಲಾ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದೆ. ಜೊತೆಗೆ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಒಂದು ಕಡೆ ಸಂತಸ, ಮತ್ತೊಂದು ಕಡೆ ಸಂಕಟದ ವಾತಾವರಣವನ್ನು ರೈತರು ಮತ್ತು ಜನಸಾಮಾನ್ಯರು ಅನುಭವಿಸುವಂತಾಗಿದೆ. ತಾಲ್ಲೂಕಿನಲ್ಲಿ ಮಳೆಯಿಂದ ಬೆಳೆಗಳನ್ನು ಕಳೆದುಕೊಂಡಿರುವ ರೈತರಿಗೆ ತ್ವರಿತವಾಗಿ ಪರಿಹಾರ ನೀಡುವ ಕೆಲಸವನ್ನು ಮಾಡಬೇಕೆಂದು ಆದೇಶಿಸಿದರು.
ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಬೆನ್ನಲ್ಲಿ ಒಮಿಕ್ರಾನ್ ಎಂಬ ಸೋಂಕು ಹರಡುತ್ತಿದೆ. ತಾಲ್ಲೂಕು ಆಡಳಿತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಥಮ ಆದ್ಯತೆ ನೀಡಬೇಕು. ಹೆಚ್ಚಾಗಿ ಜನಸೇರುವುದನ್ನು ಸ್ವಯಂ ಪ್ರೇರಿತವಾಗಿ ನಿಯಂತ್ರಿಸಿಕೊಂಡು ಸರ್ಕಾರ ಮತ್ತು ಆರೋಗ್ಯ ಇಲಾಖೆಯೊಂದಿಗೆ ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಗೂಡು ಅತೀ ಕಡಿಮೆ ಬರುತ್ತಿದ್ದು ಇದರಿಂದಾಗಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅನಾನುಕೂಲ ಉಂಟಾಗುತ್ತಿದೆ. ಮಾರುಕಟ್ಟೆಗೆ ಬರುವ ರೈತರಿಗೆ ಸೂಕ್ತ ರೀತಿಯ ಬೆಲೆ ದೊರೆಯುತ್ತಿದ್ದು ಅದರ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದರು.
ಮಾರುಕಟ್ಟೆಯಲ್ಲಿ ಗೂಡಿನ ಪ್ರಮಾಣ ಕಡಿಮೆಯಾಗಲು ಕಾರಣ ಏನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ಮಾರುಕಟ್ಟೆಗೆ ಹೆಚ್ಚಿನ ಗೂಡು ಬರುವಂತೆ ನೋಡಿಕೊಳ್ಳಬೇಕೆಂದು ರೇಷ್ಮೆ ಇಲಾಖೆಯ ಅಧಿಕಾರಿ ತಿಮ್ಮರಾಜು ಅವರಿಗೆ ಸೂಚನೆ ನೀಡಿದ ಶಾಸಕರು ಮಾರುಕಟ್ಟೆಯ ಸಮಸ್ಯೆಗಳು ಮತ್ತು ಅದಕ್ಕೆ ಪರಿಹಾರ ಕಲ್ಪಿಸುವ ಸಲುವಾಗಿ ಶೀಘ್ರದಲ್ಲಿ ಸಭೆ ಕರೆಯುವಂತೆ ಉಪನಿರ್ದೇಶಕರಿಗೆ ಸೂಚನೆ ನೀಡಬೇಕೆಂದು ಆದೇಶಿಸಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ ಮಂಜುನಾಥ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಲೋಕೋಪಯೋಗಿ ಇಲಾಖೆಯ ಎಇಇ ಲೋಕೇಶ್, ಪಂಚಾಯತ್ ರಾಜ್ ಇಲಾಖೆಯ ಎಇಇ ರಮೇಶ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮತ್ತಿತರರು ತಮ್ಮ ಇಲಾಖೆಯ ಪ್ರಗತಿ ವರದಿಗಳನ್ನು ಮಂಡಿಸಿದರು.
ತಹಶೀಲ್ದಾರ್ ಬಿ.ಎಸ್. ರಾಜೀವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್, ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.