ಶಿಡ್ಲಘಟ್ಟದ ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರಿಗೆ ಕೋವಿಡ್ ಸೋಂಕು ಇರುವುದು ಶುಕ್ರವಾರ ರಾತ್ರಿ ದೃಢಪಟ್ಟಿದೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದು ತಿಳಿದುಬಂದಿದೆ.
ಶನಿವಾರ ಬೆಳಿಗ್ಗೆ ಗ್ರಾಮಾಂತರ ಠಾಣೆ ಮತ್ತು ಕನಕನಗರದಲ್ಲಿರುವ ಎಸ್‌ಐ ಮನೆಯನ್ನು ವೈರಸ್ ನಾಶಕ ದ್ರಾವಣ ಸಿಂಪಡಿಸಿ ಶುಚಿಗೊಳಿಸಲಾಗಿದೆ. ಪ್ರಸ್ತುತ ಎಸ್‌ಐ ಮನೆ ಪ್ರದೇಶದಲ್ಲಿ ಸೀಲ್‌ಡೌನ್ ಮಾಡಲಾಗಿದೆ.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈವರೆಗೆ 8 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ನಾಗರಿಕರಲ್ಲಿ ಆತಂಕ ಉಂಟು ಮಾಡಿದೆ.
ಶುಕ್ರವಾರ ನಗರದ ಹೊರವಲಯದ ಹನುಮಂತಪುರದ ಬಳಿಯಿರುವ ಮಹಿಳಾ ಪೂರಕ ಪೌಷ್ಠಿಕ ಆಹಾರ ಉತ್ಪಾದನಾ ಘಟಕ (ಎಂ.ಎಸ್.ಪಿ.ಟಿ.ಸಿ) ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದರು. ಜೊತೆಗೆ ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಬಳಿಯ ಸರ್ವೇ ನಂ 10 ರಲ್ಲಿ ಪೊಲೀಸ್ ಇಲಾಖೆಗೆ ಮಂಜೂರಾಗಿರುವ 4 ಎಕರೆ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಶುಕ್ರವಾರ ಚಾಲನೆ ನೀಡಿದ್ದರು. ಈ ಎರಡೂ ಕಾರ್ಯಕ್ರಮಗಳಲ್ಲಿ ತಹಶೀಲ್ದಾರ್ ಕೆ.ಅರುಂದತಿ, ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಅವರೊಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಎಸ್.ಐ ಕೂಡ ಭಾಗವಹಿಸಿದ್ದರು.
ಪ್ರಾಥಮಿಕ ಸಂಪರ್ಕಿತರು 29 ಮಂದಿ ಮತ್ತು ದ್ವಿತೀಯ ಸಂಪರ್ಕಿತರು 87 ಮಂದಿಯ ಸ್ವಾಬ್ ಪರೀಕ್ಷೆ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ.