ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿರಸ್ತೆದಾರ್ ಕೆ.ಎನ್.ಮಂಜುನಾಥ್ ಮಾತನಾಡಿದರು.
ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ತಿಳಿದುಬರುತ್ತದೆ. ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿರುವುದರಿಂದಲೇ ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ಬರೆದಿದ್ದಾರೆ ಎಂದು ಅವರು ತಿಳಿಸಿದರು.
ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಅದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯಗಳನ್ನು ನಡೆಸಿದೆ. ಮಹಾನ್ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ ಎಂದರು.
ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಎಚ್.ನಾರಾಯಣಸ್ವಾಮಿ, ಸಮುದಾಯದ ಹಿರಿಯ ಮುಖಂಡ ಎ.ವೈ.ನಾಗಪ್ಪ, ದೇವರಾಜ್, ವೆಂಕಟೇಶ್, ವೇಣು, ಯಲ್ಲಪ್ಪ, ಸುರೇಶ್, ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.