Bashettahalli, Sidlaghatta : ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಮಾರ್ಗದರ್ಶನ ಅತ್ಯವಶ್ಯಕ, ಹಾಗಾಗಿ ಹೆಚ್ಚಿನ ಜವಾಬ್ದಾರಿಯನ್ನು ಪೋಷಕರು ವಹಿಸಿಕೊಂಡು ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕೆಂದು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಶ್ಯಾಮಲಾ ವಿನೋದ್ ತಿಳಿಸಿದರು.
ತಾಲ್ಲೂಕಿನ ಬಶೆಟ್ಟಿಹಳ್ಳಿ ಗ್ರಾಮದ ಅಂಬೆಡ್ಕರ್ ಭವನದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಡ್ಲಘಟ್ಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಬಳ್ಳಾಪುರದ ಜಿಲ್ಲಾ ನಿರ್ದೇಶಕ ಪ್ರಶಾಂತ್.ಸಿ.ಎಸ್. ರವರು, ನಮ್ಮ ಭಾರತ ದೇಶವು ವಿಶ್ವದಲ್ಲಿಯೇ ಅತಿ ಹೆಚ್ಚು ತಂಬಾಕು ಉಪಯೋಗಿಸುವ ದೇಶವಾಗಿದೆ. ತಂಬಾಕಿನ ಬಳಕೆ ಇತರ ವಿಧಧ ಕ್ಯಾನ್ಸರ್‌ಗಳು ಹಾಗೂ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಯೋಜನೆಯಿಂದ ಸುಮಾರು ೫೦೦ ಕ್ಕೂ ಹೆಚ್ಚು ಕಾರ್ಯಕ್ರಮವನ್ನು ಶಾಲಾ ಕಾಲೇಜುಗಳಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯರಾದ ತ್ಯಾಗರಾಜ್ ರವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಪ್ರತೀ ವರ್ಷವು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನ ಆಚರಣೆ ಮತ್ತು ಮದ್ಯವರ್ಜನ ಶಿಬಿರ ಮುಂತಾದ ಕಾರ್ಯಕ್ರಮಗಳ ಮೂಲಕ ಹದಿ ಹರೆಯರಲ್ಲಿ, ಯುವಕರಲ್ಲಿ ತಂಬಾಕು ಹಾಗೂ ಇತರೆ ದುಷ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಸುರೇಶ ಗೌಡ ಎಸ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಅರುಣಾ, ಒಕ್ಕೂಟದ ಅಧ್ಯಕ್ಷರು, ಸೇವಾಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.