Home News ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಮನವಿ

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಮನವಿ

0

ಕರ್ತವ್ಯ ನಿರತ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೆ.ಅರುಂದತಿ ಮೂಲಕ ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ದೇಶದ ಸಂವಿಧಾನದಡಿಯಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರ ಮೇಲೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದು ಖಂಡನೀಯ ಎಂದರು.

ದಿನ ನಿತ್ಯ ಆತಂಕ ಹಾಗೂ ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಸರ್ಕಾರ ಜಾರಿ ತರಬೇಕು. ಸರ್ಕಾರದಿಂದ ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡುವುದು ಸೇರಿದಂತೆ ಕುಟುಂಬದ ಸದಸ್ಯರಿಗೆ ಅನುಕಂಪದ ಆದಾರದ ಮೇಲೆ ಉದ್ಯೋಗ ನೀಡಬೇಕು. ಅಧಿಕಾರಿಯೊಬ್ಬರನ್ನು ಹಾಡಹಗಲೇ ಕೊಲೆ ಮಾಡಿರುವ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕೆ.ಅರುಂದತಿ ರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಕೆ.ಅರುಂದತಿ ಮಾತನಾಡಿ ಬಂಗಾರಪೇಟೆ ತಹಸೀಲ್ದಾರ್ ಆಗಿದ್ದ ಚಂದ್ರಮೌಳೇಶ್ವರ ಅವರನ್ನು ಹತ್ತಿರದಿಂದ ನೋಡಿದ್ದು ತುಂಬಾ ಸಹೃದಯವಂತರಾಗಿದ್ದರು. ಇಂತಹ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾನೂ ಸಹ ಓರ್ವ ಅಧಿಕಾರಿಯಾಗಿ ಮೇಲಾಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕುಮಾರ್, ಕಾರ್ಯದರ್ಶಿ ಅಕ್ಕಲರೆಡ್ಡಿ, ಖಜಾಂಚಿ ಡಿ.ಆರ್.ಪ್ರೀತಮ್, ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಹಾಜರಿದ್ದರು.