Sidlaghatta : ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ 2022-23 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದ (Taluk Level Primary & High School Sports Championship) ಅಧ್ಯಕ್ಷತೆ ವಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ರಘುನಾಥರೆಡ್ಡಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳುವುದರೊಂದಿಗೆ ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿರಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶಾರೀರಕ ಹಾಗೂ ಭೌತಿಕ ಬೆಳವಣಿಗೆಯಾಗುತ್ತದೆ. ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಗಮನ ಹರಿಸದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ದಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ, ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಮಕ್ಕಳನ್ನು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಸುವುದರಿಂದ ಉತ್ತಮ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ. ಹಾಗಾಗಿ ದೈಹಿಕ ಶಿಕ್ಷಕರು ಇನ್ನಷ್ಟು ಕ್ರೀಡಾಪಟುಗಳನ್ನು ಬೆಳೆಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.
ಶಿಕ್ಷಣ ಸಂಯೋಜಕ ಭಾಸ್ಕರಗೌಡ ಮಾತನಾಡಿ ಶಾಲಾ ಶಿಕ್ಷಕರು ಮಕ್ಕಳಲ್ಲಿ ಕೇವಲ ಪಠ್ಯವನ್ನಷ್ಟೇ ತುಂಬುವ ಕೆಲಸ ಮಾಡದೇ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವೆಂಕಟರೆಡ್ಡಿ, ತಾಲ್ಲೂಕು ದೈಹಿಕ ಶೀಕ್ಷಕರ ಸಂಘದ ಪ್ರಕಾಶ್, ಶಿಕ್ಷಕರಾದ ಗಜೇಂದ್ರ ಹಾಜರಿದ್ದರು.