Sidlaghatta : ಸರ್ಕಾರದ ಮಾರ್ಗ ಸೂಚಿಗಳಂತೆ ಸಿದ್ಧಪಡಿಸಿರುವ ಕ್ರಿಯಾಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಮನಸೊ ಇಚ್ಛೆ ಕಾಮಗಾರಿಗಳನ್ನು ಬದಲಾವಣೆ ಮಾಡುವ ಅವಕಾಶಗಳು ಇಲ್ಲ ಎಂದು ಅಧಿಕಾರಿಗಳಿಗೆ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಜಾವೀದಾ ನಸೀಮಾ ಖಾನಂ ಸೂಚಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಮನಸೋ ಇಚ್ಛೆ ಕಾಮಗಾರಿಗಳನ್ನು ಬದಲಾವಣೆ ಮಾಡಲು ಅವಕಾಶಗಳಿಲ್ಲ ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಒಂದು ವೇಳೆ ಬದಲಾವಣೆ ಮಾಡಬೇಕಾದರೆ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದ ಬಳಿಕ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದರು.
ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಕ್ರಿಯಾಯೋಜನೆಯಲ್ಲಿ ಬದಲಾವಣೆ ಮಾಡಿದ್ದಾರೆ ಎಂದು ತಾಪಂ ಇಓ ಮುನಿರಾಜು ಸಭೆಯಲ್ಲಿ ಗಮನಸೆಳೆದಾಗ ಅಧಿಕಾರಿಗಳ ಮನಸೋ ಇಚ್ಛೆ ಕಾಮಗಾರಿ ಬದಲಾವಣೆ ಮಾಡಲು ಅವಕಾಶಗಳಿಲ್ಲ ಯಾವುದೇ ರೀತಿಯ ಬದಲಾವಣೆ ಆಗಬೇಕಂದ್ರೆ ಸಭೆಯಲ್ಲಿ ಮಂಡಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸೂಚಿಸಿದರು.
ನಗರದ ಹೊರವಲಯದಲ್ಲಿ ನಿರ್ಮಿಸಿರುವ ಕೃಷಿ ಇಲಾಖೆಯ ಕಚೇರಿಗೆ ಮೂಲಭೂತವಾಗಿ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯಗಳಿಲ್ಲ ಇಂಥ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸಿದ ಆಡಳಿತಾಧಿಕಾರಿಗಳು ನಿಮ್ಮ ಮನೆಯಲ್ಲಿ ವಿದ್ಯುತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಹೋಗ್ತೀರಾ ಎಂದು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಯಾವುದೇ ಇಲಾಖೆಯ ಮೂಲಕ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಮೂಲಭೂತವಾಗಿ ಕುಡಿಯುವ ನೀರು ವಿದ್ಯುತ್ ಸಂಪರ್ಕ ಮತ್ತು ಶೌಚಾಲಯ ಅನ್ನು ಕಡ್ಡಾಯವಾಗಿ ನಿರ್ಮಿಸಬೇಕು ಎಸ್ಟಿಮೇಟ್ ನಲ್ಲಿ ಅದನ್ನು ಸೇರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಲೋಕೋಪಯೋಗಿ ಇಲಾಖೆ ಸಹಿತ ಇನ್ನಿತರ ಇಲಾಖೆಯ ಮೂಲಕ ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಯಾವುದೇ ರೀತಿಯ ಸಾರ್ವಜನಿಕರ ದೂರುಗಳಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಸರ್ಕಾರಿ ವಸತಿಶಾಲೆ ಮತ್ತು ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡಿ ಯಾವುದೇ ರೀತಿಯ ದೂರುಗಳು ಬರದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.
ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟ ಎಂದು ಪ್ರತಿಬಿಂಬಿಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ವಿಶೇಷ ತರಗತಿಗಳನ್ನು ಮಾಡುವ ಮೂಲಕ ಬರುವ ಪರೀಕ್ಷೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಿ.ಮುನಿರಾಜ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.