Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ (Silk Cocoon Market) ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿಯ (KSMB) ಅಧ್ಯಕ್ಷ ನಾರಾಯಣಸ್ವಾಮಿ ಭೇಟಿ ನೀಡಿ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಕುಂದು ಕೊರತೆಗಳನ್ನು ಆಲಿಸಿದರು.
ರಾಜ್ಯದಲ್ಲಿ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಸಭೆ ಕರೆದು ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಹಿತರಕ್ಷಣೆ ಮಾಡಲು ಪ್ರಥಮ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಸಂಕಷ್ಟದಲ್ಲಿದ್ದಾರೆ. ಇವರಿಬ್ಬರ ಕಷ್ಟಗಳಿಗೆ ಸ್ಪಂದಿಸಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಮಂದಿನ ದಿನಗಳಲ್ಲಿ ರೇಷ್ಮೆ ಸಚಿವರ ಸಮ್ಮುಖದಲ್ಲಿ ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್‍ಗಳ ಸಭೆ ಕರೆದು ಸಮಸ್ಯೆಗಳನ್ನು ಆಲಿಸಿ ಸರ್ಕಾರ ಮಟ್ಟದಲ್ಲಿ ಇತ್ಯರ್ಥವಾಗುವ ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡಲಾಗುವುದು. ಪ್ರತಿಯೊಂದು ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರ ಸಭೆಗಳನ್ನು ನಡೆಸಲಾಗುವುದು ಎಂದರು.
ಮಳೆಯ ಪ್ರಭಾವದಿಂದ ರೇಷ್ಮೆ ಬೆಳೆಗಾರರಿಗೆ ಸೂಕ್ತ ದರ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅದೇ ರೀತಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಸಹ ಸಾಲಗಳನ್ನು ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇವೆಲ್ಲವೂ ನನ್ನ ಗಮನಕ್ಕೆ ಬಂದಿದೆ. ಕಳೆದ 15 ದಿನಗಳ ಹಿಂದೆ ಕೆ.ಎಎಸ್.ಎಂ.ಬಿ ಯ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಮಂಡಳಿಯಿಂದ ರೇಷ್ಮೆ ಉದ್ದಿಮೆಯ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲಾಗುವುದು. ಅತೀ ಶೀಘ್ರದಲ್ಲಿ ಮಂಡಳಿಯ ಬೋರ್ಡ್ ಮೀಟಿಂಗ್ ಕರೆಯುತ್ತೇನೆ ಎಂದರು.
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈಗಾಗಲೇ 2300 ಕೋಟಿ ರೂ.ಗಳ ನೆರವು ಸಹ ನೀಡಲಾಗಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಂಕಲ್ಪದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಂದು ಹೋಬಳಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗುವುದು. ಕ್ಷೇತ್ರದ ಶಾಸಕರು ಸಹ ಕನಿಷ್ಟ ತಿಂಗಳಿಗೊಮ್ಮೆ ಆದರೂ ರೇಷ್ಮೆ ಬೆಳೆಗಾರರ ಮತ್ತು ನೂಲು ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಆಲಿಸಬೇಕಿತ್ತು, ಆದರೆ ಅವರು ಅದನ್ನು ಮಾಡಿಲ್ಲ ಎಂದು ದೂರಿದರು.
ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿದ ಬಳಿಕ ರೀಲರ್ಸ್ ಇರ್ಷಾದ್ ಅವರ ಸ್ವಯಂಚಾಲಿತ ರೀಲಿಂಗ್ ಕಾರ್ಖಾನೆಗೆ ಹಾಗೂ ಮಲ್ಲಹಳ್ಳಿಯ ರೇಷ್ಮೆ ಬೆಳೆಗಾರರ ತೋಟಕ್ಕೆ ಕೆಎಸ್‍ಎಂಬಿ ಅಧ್ಯಕ್ಷರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾರುಕಟ್ಟೆಯ ಪ್ರಭಾರ ಉಪನಿರ್ದೇಶಕ ಸುಂದರ್ ರಾಜ್, ಸಹಾಯಕ ನಿರ್ದೇಶಕ ನರಸಿಂಹಮೂರ್ತಿ, ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ರಾಮಕುಮಾರ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ತಿಮ್ಮರಾಜು, ತಾಲ್ಲೂಕು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅನ್ಸರ್ ಖಾನ್, ಉಪಾಧ್ಯಕ್ಷ ಆನಂದ, ಖಜಾಂಚಿ ಸಾದಿಕ್, ಸಿಲ್ಕ್ ರೀಲರ್ಸ್ ಸೊಸೈಟಿಯ ಅಧ್ಯಕ್ಷ ಜಿ.ರೆಹಮಾನ್, ರೇಷ್ಮೆ ನೂಲು ಬಿಚ್ಚಾಣಿಕೆದಾರರಾದ ಇಬ್ರತ್ ಹಾಜರಿದ್ದರು.