Sidlaghatta : ರಾಜ್ಯದಾದ್ಯಂತ ಸುಮಾರು 60,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನದಿಂದ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ನೆರವಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ 199 ಮಂದಿ ವಿದ್ಯಾರ್ಥಿಗಳು ಶಿಷ್ಯವೇತನದ ಸದುಪಯೋಗ ಮಾಡಿಕೊಂಡು ತಮ್ಮ ಶಿಕ್ಷಣವನ್ನು ಉನ್ನತ ಮಟ್ಟಕ್ಕೆ ಒಯ್ಯಬೇಕೆಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ತಿಳಿಸಿದರು.
ನಗರದ ಕಾಳಿಕಾಂಭ ಕಮಠೇಶ್ವರ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ 2023-24 ನೇ ಸಾಲಿನಲ್ಲಿ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಆಯ್ಕೆಯಾದ ಒಟ್ಟು 199 ಮಂದಿ ವಿದ್ಯಾರ್ಥಿಗಳಿಗೆ ಸುಮಾರು 29,99,000 ರೂ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಈ ಯೋಜನೆಯ ಬಗ್ಗೆ ಇತರರಿಗೂ ತಿಳಿಸುವ ಮೂಲಕ ಮುಂದಿನ ವರ್ಷದಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಪೂಜ್ಯರ ಈ ಕಾರ್ಯಕ್ರಮದಿಂದ ಸದುಪಯೋಗ ಪಡೆದುಕೊಳ್ಳಲು ಸಹಕರಿಸಬೇಕೆಂದು ಹೇಳಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಎಸ್. ಸುರೇಶ ಗೌಡ, ದೇವರಾಜ್, ಮೇಲ್ವಿಚಾರಕ ದಯಾನಂದ್, ಯೋಜನಾ ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.