ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ಬಿ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್ ಮಾತನಾಡಿದರು.
ಸೇವೆಗೆ ಇನ್ನೊಂದು ಹೆಸರೇ ಶ್ರೀ ಕ್ಷೇತ್ರ ಧರ್ಮಸ್ಥಳ. ಅಂತಹ ಸಂಸ್ಥೆಯಲ್ಲಿ ಪದಾಧಿಕಾರಿಗಳಾದ ತಾವು ಇನ್ನಷ್ಟು ಸೇವಾ ಮನೋಭಾವನೆಯಿಂದ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರರಾಗಿ ಎಂದು ಅವರು ತಿಳಿಸಿದರು.
ಸ್ವಾವಲಂಬನೆಗೆ ಒತ್ತು ನೀಡುವ ವಿವಿಧ ತರಬೇತಿಗಳನ್ನು ಆಯೋಜಿಸುವ ಮೂಲಕ ಸ್ಥಳೀಯ ಯುವಕರು ಹಾಗೂ ಮಹಿಳೆಯರ ಆರ್ಥಿಕ ಸದೃಢತೆಗೆ ನೆರವಾಗಬೇಕು ಎಂದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ 29 ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸುಮಾರು 5 ಲಕ್ಷ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ 45 ಲಕ್ಷ ಸದಸ್ಯರನ್ನು ಒಳಗೊಂಡಿದೆ. ಇಷ್ಟು ದೊಡ್ಡ ಸಂಸ್ಥೆಯ ಆಧಾರ ಸ್ತಂಭಗಳು ಒಕ್ಕೂಟದ ಪದಾಧಿಕಾರಿಗಳು. ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ಅರಿತುಕೊಂಡಾಗ ಯೋಜನೆಯ ಎಲ್ಲಾ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಸಾಧ್ಯ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಮೇಲ್ವಿಚಾರಕರಾದ ಜ್ಯೋತಿ, ಅನಿತಾ, ರಮೇಶ್ ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಯವರು ಮತ್ತು ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.