Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲೆಯ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು ಅವರು ಮಾತನಾಡಿದರು.
ಮುಂದಿನ ವರ್ಷದಲ್ಲಿ ಚುನಾವಣೆ ಇರುವ ಹಿನ್ನೆಲೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗಬೇಕು. ನಿಮ್ಮ ಹಳ್ಳಿ ಮತ್ತು ಗ್ರಾಮಗಳಲ್ಲಿ ಮತದಾರರ ಸೇರ್ಪಡೆ ಪ್ರಕ್ರಿಯೆ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡುವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ತಹಶಿಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದಲು ನಿರಂತರ ಪ್ರಯತ್ನ ಬಹಳ ಮುಖ್ಯ. ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಗೂ ಎಪಿಜೆ ಅಬ್ದುಲ್ ಕಲಾಂ ಅವರ ಮಾದರಿಯಲ್ಲಿ ಯಶಸ್ಸಿನ ದಢ ಸೇರುವುದು ನಿಮ್ಮ ಗುರಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಹಂಡಿಗನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಸಿಡಿಪಿಒ ನವತಾಜ್, ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್, ಪಿಡಿಒ ಮಧು, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮಹದೇವ್, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಹಾಜರಿದ್ದರು.