Sidlaghatta : ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ನಗರದ ವಿವಿದೆಡೆ ಅಂಗಡಿ, ಹೋಟೆಲ್, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವವರಿಗೆ ತಂಬಾಕು ನಿಯಂತ್ರಣ ಕಾನೂನಿನನ್ವಯ ಬುಧವಾರ ದಂಡ ವಿಧಿಸಿದರು.
ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ದೇವರಾಜ್ ಹಾಗೂ ತಂಡ ಪೊಲೀಸರ ಸಹಯೋಗದಲ್ಲಿ ನಗರದ ವಿವಿಧ ಅಂಗಡಿಗಳು, ತಳ್ಳುವ ಗಾಡಿಗಳು, ಕಾಫಿ ಟೀ ಶಾಪ್‌ಗಳಿಗೆ ಹೋಗಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಂಡು ತಿಳುವಳಿಕೆ ನೀಡಿದ್ದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದರು.
ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ದೇವರಾಜ್ ಮಾತನಾಡಿ, “ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ಕಾಯ್ದೆಯ ಬಗ್ಗೆ ಜನರಿಗೆ ತಿಳಿವಳಿಕೆ ನೀಡುತ್ತಾ ಸಾರ್ವಜನಿಕವಾಗಿ ಬೀಡಿ ಸಿಗರೇಟ್ ಸೇದುವವರಿಗೆ ಸಣ್ಣ ಪ್ರಮಾಣದ ದಂಡ ವಿಧಿಸಿದೆವು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಿದೆ. ಈ ಬಗ್ಗೆ ನಾಮಫಲಕವನ್ನೂ ಕಡ್ಡಾಯವಾಗಿ ಶಾಲಾ ಕಾಲೇಜಿನ ಆವರಣ ಗೋಡೆಯ ಮುಂಭಾಗದಲ್ಲಿ ಪ್ರದರ್ಶಿಸಬೇಕಾಗುತ್ತದೆ” ಎಂದರು.
ಸೆಕ್ಷನ್ 4 ರ ಅಡಿಯಲ್ಲಿ 20 ಪ್ರಕರಣಗಳಿಂದ 1410 ರೂ, ಸೆಕ್ಷನ್ 6 ಬಿ, ಅಡಿಯಲ್ಲಿ 6 ಪ್ರಕರಣಗಳಿಂದ 350 ರೂ ಸೇರಿದಂತೆ ಒಟ್ಟು 1760 ರೂ ದಂಡ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ರಾಘವೇಂದ್ರ, ಮಂಜುನಾಥ್, ಆರೋಗ್ಯ ನಿರೀಕ್ಷಕರಾದ ಶಂಕರರೆಡ್ಡಿ, ಧನಂಜಯ್, ಪೊಲೀಸ್ ಪೇದೆ ಚಂದ್ರ ಹಾಜರಿದ್ದರು.