ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ-2022 ಸಂಬಂಧಿಸಿದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ ಮಾತನಾಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಇದರ ಉದ್ದೇಶ ಯುವ ಮತದಾರರಿಗೆ ಚುನಾವಣೆ ಮತ್ತು ಮತದಾನದ ಕುರಿತು ಜಾಗೃತಿ ಮೂಡಿಸುವುದಾಗಿದೆ ಎಂದು ಅವರು ತಿಳಿಸಿದರು.
ದೇಶದ 18 ವರ್ಷ ತುಂಬಿದ ಯುವಕರು ಯುವತಿಯರು ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಇದರಿಂದ ಪ್ರಜಾಪ್ರಭುತ್ವವು ಸದೃಡವಾಗಿರುತ್ತದೆ. ಭಾರತ ಸಂವಿಧಾನವು ಪ್ರಪಂಚದ ದೊಡ್ಡ ಲಿಖಿತ ಸಂವಿಧಾನವಾಗಿದೆ. ಭಾರತ ಚುನಾವಣಾ ಆಯೋಗವು ಸ್ಥಾಪನೆಯಾದ ನೆನಪಿಗಾಗಿ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಮತದಾನದ ಮಹತ್ವವನ್ನು ಜನರಿಗೆ ಅರಿವು ಮೂಡಿಸುವುದಾಗಿದೆ. ಈ ಸಂಬಂಧವಾಗಿ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪೋಸ್ಟರ್ ಡಿಸೈನ್ (ಭಿತ್ತಿಚಿತ್ರ), ಪ್ರಬಂಧ ಸ್ಪರ್ಧೆ ಮತ್ತು ರಸಪ್ರಶ್ನೆಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಸುಮಾರು 80 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಸ್ಪರ್ಧೆಯನ್ನು ವೀಕ್ಷಿಸಿದರು. ಶಿಕ್ಷಣ ಸಂಯೋಜಕ ಈ.ಭಾಸ್ಕರ ಗೌಡ, ಮುಖ್ಯ ಶಿಕ್ಷಕಿ ಮಂಜುಳ, ತೀರ್ಪುಗಾರರಾದ ಶಂಕರಪ್ಪ, ಜಗದೀಶ್ ಬಸವನಗೌಡ, ನಾಗೇಶ್, ಸತೀಶ್, ದಿವ್ಯ ಡಿಸೋಜ, ಕಮಲಮ್ಮ ಹಾಜರಿದ್ದರು.