Yeddulatippenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎದ್ದಲತಿಪ್ಪೇನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಸೀಲ್ದಾರ್ ಬಿ.ಎನ್.ಸ್ವಾಮಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನತೆ ತಮಗೆ ಸಿಗಬೇಕಾದ ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.
ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಪೌತಿ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಪೋಡಿ, ಉಳುಮೆ ಚೀಟಿ, ಪಡಿತರ ಚೀಟಿ, ಹಕ್ಕು ಪತ್ರಗಳ ವಿತರಣೆ ಮಾಡುವ ಸಲುವಾಗಿ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಸಾರ್ವಜನಿಕರಿಗೆ ಸಹಕಾರಿಯಾಗಿದೆ. ರೈತರು ಕಂದಾಯ ಇಲಾಖೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಆಲಿಸುವ ಮೂಲಕ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ಗ್ರಾಮದಲ್ಲಿರುವ ನೀಲಗಿರಿ ಮರ ತೆರವುಗೊಳಿಸಲು ಈಗಾಗಲೇ ಅರಣ್ಯ ಇಲಾಖೆಯವರಿಗೆ ಸೂಚಿಸಲಾಗಿದೆ. ಇನ್ನುಳಿದಂತೆ ಗ್ರಾಮದ ಶಾಲೆಯಿರುವ ಸ್ಥಳ ಫಹಣಿಯಲ್ಲಿ ಹುಲ್ಲುಗಾವಲು ಎಂದು ನಮೂದಾಗಿದ್ದು ಶಾಲೆಯ ಹೆಸರಿಗೆ ಫಹಣಿ ಮಾಡಿಕೊಡುವದು ಸೇರಿದಂತೆ ಶಾಲೆಗೆ ಆಟದ ಮೈದಾನ ಕಲ್ಪಿಸುವ ಬಗ್ಗೆ ಕ್ರಮ ಜರುಗಿಸಲಾಗುವುದು. ಗ್ರಾಮದ ಸ್ವಚ್ಚತೆ ಕಾಪಾಡುವಲ್ಲಿ ಪಂಚಾಯಿತಿ ಯೊಂದಿಗೆ ನಾಗರೀಕರು ಸಹ ಕೈ ಜೋಡಿಸಬೇಕು ಎಂದರು
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯಿಮದ ಗ್ರಾಮದ ೧೨ ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಿಸಲಾಯಿತು. ಗ್ರಾಮ ಪಂಚಾಯಿತಿಯಿಂದ ಗ್ರಾಮದ ಐದು ಮಕ್ಕಳಿಗೆ ಶಿಕ್ಷಣಕ್ಕಾಗಿ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.
ತಾ.ಪಂ ಇಓ ಮುನಿರಾಜು, ಎಡಿಎಲ್‌ಆರ್ ವಸಂತಕುಮಾರ್, ಗ್ರಾಮಪಂಚಾಯಿತಿ ಅಧ್ಯಕ್ಷ ಎಚ್.ಎಂ.ಮಂಜುನಾಥಗೌಡ, ಉಪಾಧ್ಯಕ್ಷೆ ಜಯಮ್ಮ, ಸದಸ್ಯ ಸುರೇಶ್, ಪಿಡಿಓ ಯಮುನಾರಾಣಿ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ತಿಮ್ಮರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಉಮಾ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.