ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು, ಮಳ್ಳೂರು ಹಾಗೂ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಹಾಗೂ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ನೋಮೇಷ್ ಕುಮಾರ್, ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಕೊರೊನಾ ಕಾರ್ಯಪಡೆಯನ್ನು ರಚಿಸಲಾಗಿದ್ದು ಅದು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಲಸಿಕ ಅಭಿಯಾನವನ್ನು ಯಶಸ್ವಿಗೊಳಿಸಲು ಗ್ರಾಮಸ್ಥರು ಸಹಕರಿಸಬೇಕೆಂದು ಮನವಿ ಮಾಡಿದರು.
ಮಳ್ಳೂರು ಗ್ರಾಮದಲ್ಲಿ ಕೋವಿಡ್ ಸೋಂಕಿತರಾಗಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿರುವ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಮೂರೂ ಗ್ರಾಮಗಳಲ್ಲಿ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸುತ್ತಾಡಿ ಕೋವಿಡ್-19 ಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿದರು. ಲಸಿಕೆ ಪಡೆಯುವಂತೆ ಗ್ರಾಮಸ್ಥರಿಗೆ ತಿಳಿಹೇಳಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್, ಸದಸ್ಯರಾದ ಎಂ.ಜೆ. ಶ್ರೀನಿವಾಸ್, ಎಂ. ಸವಿತಾ ಗೋಪಾಲ್, ಎಂ.ಕೆ. ರವಿಪ್ರಸಾದ್, ಎಂ. ಶಿವಾನಂದ, ಶೋಭಾ ಹರೀಶ್, ಭಾಗ್ಯಲಕ್ಷ್ಮಿ ಶಿವಕುಮಾರ್, ಶಶಿಕಲಾ ರಮೇಶ್, ಗಜೇಂದ್ರ ಬಾಬು, ಪಿಡಿಒ ಶಾರದಾ, ಬಿಲ್ ಕಲೆಕ್ಟರ್ ಜನಾರ್ಧನ್, ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.